ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಬೀದರ ಬಸ್ ನಿಲ್ದಾಣ ಘಟಕ–2ಕ್ಕೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಅನುದಾನದಡಿಯಲ್ಲಿ 25 ಹೊಸ ಬಸ್ಗಳನ್ನು ಒದಗಿಸಬೇಕೆಂದು ಬೀದರ ಜಿಲ್ಲಾ ಟೋಕರೆ ಕೋಳಿ ಸಮಾಜ ಸಂಘ ಮನವಿ ಸಲ್ಲಿಸಿದೆ.
ಘಟಕ–2ರಲ್ಲಿ ಬಸ್ಗಳ ತೀವ್ರ ಕೊರತೆಯಿಂದಾಗಿ ಗ್ರಾಮೀಣ ಪ್ರದೇಶಗಳ ಅನೇಕ ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ದೊರೆಯುತ್ತಿಲ್ಲ. ಇದರ ಪರಿಣಾಮವಾಗಿ ಹಲವರು ವಿದ್ಯಾಭ್ಯಾಸದಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಇದರ ಪರಿಣಾಮವಾಗಿ ವಿದ್ಯಾರ್ಥಿಗಳು ಹಾಗೂ ವೃದ್ಧರಿಗೆ ಬಸ್ಗಳಲ್ಲಿ ಆಸನ ಸಿಗದ ಸಂಕಷ್ಟ ಎದುರಾಗಿದೆ. ಅಲ್ಲದೆ, ಈಗ ಸಂಚರಿಸುತ್ತಿರುವ ಹಲವು ಬಸ್ಗಳು ಹಳೆಯದಾಗಿದ್ದು, ನಡು ರಸ್ತೆಯಲ್ಲಿಯೇ ತಾಂತ್ರಿಕ ದೋಷದಿಂದ ನಿಲ್ಲುತ್ತಿರುವುದು ಪ್ರಯಾಣಿಕರ ಸುರಕ್ಷತೆಗೂ ಅಪಾಯಕಾರಿಯಾಗಿದೆ.
ಈ ಎಲ್ಲ ಸಮಸ್ಯೆಗಳನ್ನು ಗಮನಕ್ಕೆ ತೆಗೆದುಕೊಂಡು, ಕೆಕೆಆರ್ಡಿಬಿ ಅಧ್ಯಕ್ಷರಾದ ಡಾ. ಅಜಯಸಿಂಗ್ ಅವರಿಗೆ ಲಿಖಿತ ಮನವಿಪತ್ರ ಸಲ್ಲಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮಾರುತಿ ಮಾಸ್ಟರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅರುಣ ಮಸ್ಕಲೆ, ಶಿವಕುಮಾರ ಮನ್ನಾಖೇಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.





